Connect with us

ಕರ್ನಾಟಕ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕ್ಷಣದಿಂದ ಎಚ್‌ಡಿಕೆ ನಿದ್ದೆ ಹಾರಿ ಹೋಗಿದೆ: ದಿನೇಶ್ ಗುಂಡೂರಾವ್

Published

on

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕ್ಷಣದಿಂದ ಎಚ್ ಡಿ ಕೆ ನಿದ್ದೆ ಹಾರಿ ಹೋಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತಾಗಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು,‌ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ HDKಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ HDK ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು‌ ಆರೋಪಿಸಿದ್ದಾರೆ.

ಸರ್ಕಾರದ ವಿರುದ್ಧ ಕುಮಾರಸ್ವಾಮಿ ಅವರು ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ? ಎಂದು ದಿನೇಶ್ ಪ್ರಶ್ನಿಸಿದ್ದಾರೆ.

HDKಯವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ.
ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. HDKಯವರು ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು? ಎಂದು ವಾಗ್ದಾಳಿ ನಡೆಸಿದ್ದಾರೆ.

HDKಯವರು ಚುನಾವಣೆಗೂ ಮುನ್ನ ‘ಕಿಂಗ್ ಮೇಕರ್’ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ HDK ‘ಕಿಂಗ್ ಮೇಕರ್’ ಕನಸನ್ನು ನುಚ್ಚುನೂರು ಮಾಡಿದರು ಎಂದು ತಿರುಗೇಟು ‌ನೀಡಿದ್ದಾರೆ.

ಕನಸು ಭಗ್ನಗೊಂಡ HDK, ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಕುಮಾರಸ್ವಾಮಿ ಮಾಡಿದ್ದ ಆರೋಪಗಳೇನು?

710 ಕೋಟಿ ಗುತ್ತಿಗೆದಾರರ ಹಣ ಬಿಡುಗಡೆ ಮಾಡಲು 10 ರಿಂದ 15 ಪರ್ಸೆಂಟ್ ಗೆ ಬೇಡಿಕೆ ಇಡಲಾಗಿದೆ ಎಂಬ ಗಂಭೀರ ಆರೋಪವನ್ನು ಮಾಜಿ ಸಿಎಂ‌ ಎಚ್ ಡಿ ಕುಮಾರಸ್ವಾಮಿ ಮಾಡಿದ್ದರು.

ಬ್ರ್ಯಾಂಡ್ ಬೆಂಗಳೂರು ಮಾಡುವ ಮಹಾನುಭಾವರು ಬಿಬಿಎಂಪಿಯಲ್ಲಿ 710 ಕೋಟಿ ರೂಪಾಯಿ ಗುತ್ತಿಗೆದಾರರ ಹಣವನ್ನು ಯಾಕೆ ಬಿಡುಗಡೆ ಮಾಡಿಸಿಲ್ಲ ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದರು.

ಬಿಜೆಪಿ ಸರ್ಕಾರ ಇದ್ದಾಗ ಪ್ರತಿಯೊಂದನ್ನೂ ಪ್ರಶ್ನೆ ಮಾಡುತ್ತಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈಗೆಲ್ಲಿದ್ದಾರೆ ಎಂದು ಕೇಳಿದ್ದರು. ಗುತ್ತಿಗೆದಾರರ ಬಾಕಿ ಬಿಲ್ಲುಗಳನ್ನು ಯಾಕೆ ತಡೆ ಹಿಡಿದ್ದಾರೆ? ಬೆಂಗಳೂರು ಉಸ್ತುವಾರಿ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 710 ಕೋಟಿ ಹಣ ರಿಲೀಸ್ ಮಾಡಿಸಿಲ್ಲ. ಇದರ ಹಿಂದಿರುವ ಅಸಲಿ ಕಾರಣವನ್ನು ಜನರಿಗೆ ಕೊಂಚ ಹೇಳಬೇಕಲ್ಲವೇ ಎಂದು ಅವರು ಒತ್ತಾಯಿಸಿದ್ದರು.

ಅಲ್ಲದೆ,‌ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ವ್ಯವಹಾರದಲ್ಲಿ 1000 ಕೋಟಿ ರೂಪಾಯಿಗೂ ಮೀರಿ ಬಿಸ್ನೆಸ್ ನಡೆದಿದೆ ಎಂದು ಆರೋಪ ಮಾಡಿದ್ದರು.

Home
Videos
Shop
error: Content is protected !!